

ಉತ್ತರಪ್ರದೇಶ (ಆ, 29),, ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 10ನೇ ತರಗತಿಯ ವಿದ್ಯಾರ್ಥಿಗೆ ಅನ್ಯ ಸಮುದಾಯಕ್ಕೆ ಸೇರಿದ ಸಹಪಾಠಿ ವಿದ್ಯಾರ್ಥಿಗಳ ತಂಡ ಬ್ಯಾಟ್‌ನಿಂದ ಹಲ್ಲೆ ನಡೆಸಿದ ಕಾರಣ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ,ಪ್ರಯಾಗರಾಜ್‌ನ ಖೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಪುರ ದತ್ತು ಗ್ರಾಮದ ಬಳಿ 16 ವರ್ಷದ ಸತ್ಯಂ ಶರ್ಮಾ ಮೃತ ವಿದ್ಯಾರ್ಥಿ. ಘಟನೆಯಿಂದ ಕೋಪಗೊಂಡ ಬಾಲಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಖೇರಿ ಚೌಕದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸತ್ಯಂ ಶರ್ಮಾ ಅವರ ಸಂಬಂಧಿ ಬಾಲಕಿ ಕೂಡ ಅದೇ ಶಾಲೆಯಲ್ಲಿ ಓದುತ್ತಿದ್ದರು. ಶಾಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಬಾಲಕನೊಂದಿಗೆ ಜಗಳವಾಡಿದ್ದರು. ಈ ವೇಳೆ ಶಾಲೆಯ ಶಿಕ್ಷಕರೊಬ್ಬರು ಸಮಾಧಾನಪಡಿಸಿ ಕಳುಹಿಸಿದ್ದರು. ಆದರೆ ಮನೆಗೆ ತೆರಳುವಾಗ ಮತ್ತೆ ಗಲಾಟೆಯಾಗಿ ಕೊಲೆ ನಡೆದಿದೆ ಎನ್ನಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಈ ಕುರಿತು ಮಾಹಿತಿಯನ್ನು ನೀಡಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಬಳಿಕ ಮನೆಗೆ ತೆರಳುವಾಗ ವಿದ್ಯಾರ್ಥಿ ಮೇಲೆ ಬ್ಯಾಟ್‌ನಿಂದ ಹಲ್ಲೆ ನಡೆಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕರಣ ದಾಖಲಾಗಿದು, ಸದ್ಯ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಬಾಲಕ ಸಂಬಂಧಿ ಬಾಲಕಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ನಡೆದಿದೆ ಎಂದು ಆರೋಪಿಸಲಾಗಿತ್ತು. ಆದರೆ ಸುದ್ದಿ ಸುಳ್ಳು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅಶಾಂತಿ ಹೆಚ್ಚಾದ ಕಾರಣ ಅಂಗಡಿಗಳನ್ನು ಮುಚ್ಚಲಾಗಿತ್ತು. ಸಂಜೆಯವರೆಗೂ ಗಲಾಟೆ ಮುಂದುವರಿದಿದ್ದು, ಪೊಲೀಸರು ಸ್ಥಳದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.