

ಕ್ಷೇತ್ರದ ಅಭಿವೃದ್ಧಿಗೆ ಸದಾ ಸಿದ್ದ: ಎಂ.ಪಿ.ರೇಣುಕಾಚಾರ್ಯ
ಸದಾವಣಗೆರೆ ಜೂ.05, ಸರರ್ಕಾರದ ವಿವಿಧ ಯೋಜನೆಗಳ ಮೂಲಕ ಅನುದಾನ ಮಂಜೂರು ಮಾಡಿಸಿ ಕ್ಷೇತ್ರದ ಅಭಿವೃದ್ಧಿಗೆ ಹಗಲು-ಇರುಳು ಕೆಲಸ ಮಾಡಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದರು.
ಹೊನ್ನಾಳಿ ತಾಲ್ಲೂಕಿನ ಸಾಸ್ವೆಹಳ್ಳಿ-1 ನೇ ಹೋಬಳಿಯಲ್ಲಿ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಇದುವರೆಗೂ ಸರ್ಕಾರದಿಂದ ನೂರಾರು ಕೋಟಿ ರೂ ಅನುದಾನ ತಂದು ಹಲವಾರು ಕಾಮಗಾರಿಗಳನ್ನು ಮಾಡಲಾಗಿದೆ. ಘನ ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ, ತುಂಗಭದ್ರ ನದಿ ಹೊಳೆ ಮೆಟ್ಟಿಲು ಮತ್ತು ಕೂಡು ರಸ್ತೆ ಕಾಂಕ್ರೀಟ್ ಕಾಮಗಾರಿ, ಪ್ರಾಥಮಿಕ ಶಾಲಾ ಕೊಠಡಿ, ಗ್ರಾಮ ಪಂಚಾಯಿತಿ ಗ್ರಂಥಾಲಯ ಕಟ್ಟಡ, ಜಲ ಜೀವನ್ ಮಿಷನ್ ಯೋಜನೆಯಲ್ಲಿ ಮನೆ ಮನೆಗೆ ನಳ ಸಂಪರ್ಕ, ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಯ ಪಂಪ್ ಹೌಸ್-1 ಜಕ್ವೆಲ್ ಸಬ್ ಸ್ಟೇಷನ್ ನಿರ್ಮಾಣ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಗುತ್ತಿದೆ ಎಂದರು.

ಸಂಸದ ಡಾ.ಜಿ.ಎಂ ಸಿದ್ದೇಶ್ವರ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಜನರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪ್ರಧಾನ ಮಂತ್ರಿ ಫಸಲ್ ಭೀಮಾ, ಕಿಸಾನ್ ಸಮ್ಮಾನ್, ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ದೇಶದ ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ ಲಸಿಕೆ ಹಾಗೂ 80 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ನೀಡಲಾಗಿದೆ ಎಂದರು.
ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ್ ಮಾತನಾಡಿ, ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಸ್ತೆ, ಒಳಚರಂಡಿ ಒಳಗೊಂಡಂತೆ ಜನರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಶಾಸಕರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ, ಜಿಲ್ಲೆಯ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು. ಕೋವಿಡ್ ಸಂದರ್ಭದಲ್ಲಿ ಸದಾ ಜನರ ಜೊತೆಗಿದ್ದು ಧೈರ್ಯ ತುಂಬಿದ ರೇಣುಕಾಚಾರ್ಯ ಅವರ ಕಾರ್ಯವನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ 28 ಫಲಾನುಭವಿಗಳಿಗೆ ಸಾಗುವಳಿ ಚೀಟಿಯಂತೆ ಖಾತೆ ಮತ್ತು ಪಹಣಿ, 02 ಫಲಾನುಭವಿಗಳಿಗೆ ಮಳೆಯಿಂದ ಹಾನಿ ಪರಿಹಾರ ಪರಿಹಾರ ಪ್ರಮಾಣ ಪತ್ರ, 05 ಜನ ರೈತರಿಗೆ ಕೃಷಿ ಇಲಾಖೆಯಿಂದ ಸಾಂಕೇತಿಕವಾಗಿ ಬಿತ್ತನೆ ಬೀಜ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೊ.ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಜಿ.ಪಂ ಸಿಇಓ ಡಾ.ಎ. ಚನ್ನಪ್ಪ, ಉಪವಿಭಾಗಾಧಿಕಾರಿ ತಿಮ್ಮಣ್ಣ ಹುಲ್ಲುಮನಿ, ಡಿವೈಎಸ್ಪಿ ಸಂತೋಷ್, ಗ್ರಾ ಪಂ ಅಧ್ಯಕ್ಷೆ ಸವಿತಾ ಉಮೇಶ್ ಸೇರಿದಂತೆ ವಿವಿಧ ನಿಗಮ ಮಂಡಳಿ ನಿರ್ದೇಶಕರು, ಬಗರ್ ಹುಕುಂ ಕಮಿಟಿ ಅಧ್ಯಕ್ಷರು ಮತ್ತು ಸದಸ್ಯರು, ಸಾಸ್ವೆಹಳ್ಳಿ ಗ್ರಾ ಪಂ ಸದಸ್ಯರು ಸೇರಿದಂತೆ ಇತರರು ಭಾಗವಹಿಸಿದ್ದರು.
